ಮುಂದಿನ ಒಂದು ವಾರದೊಳಗೆ ಸಂಪುಟ ವಿಸ್ತರಣೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ನವದೆಹಲಿ: ರಾಜ್ಯದಲ್ಲಿ ಪ್ರವಾಹ ಮತ್ತು ಕೊರೊನಾ ತೃತೀಯ ಅಲೆಯ ಆತಂಕ ಇರುವುದರಿಂದ ಮುಂದಿನ ಒಂದು ವಾರದೊಳಗೆ ಸಚಿವ ಸಂಪುಟವನ್ನು ವಿಸ್ತರಿಸಲಾಗುವುದು ಎಂದು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.

ಪ್ರಮಾಣ ವಚನ ಸ್ವೀಕರಿಸಿದ ನಂತರ ಶುಕ್ರವಾರ ಮೊದಲ ಬಾರಿಗೆ ಇಲ್ಲಿಗೆ ಬಂದಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಹಾಗೂ ಪಕ್ಷದ ವರಿಷ್ಠರನ್ನು ಭೇಟಿ ಮಾಡಿ ಚರ್ಚಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರೊಂದಿಗೆ ತ್ವರಿತವಾಗಿ ಸಂಪುಟ ವಿಸ್ತರಣೆ ಮಾಡಬೇಕೆಂದು ಸಂಕ್ಷಿಪ್ತವಾಗಿ ಚರ್ಚೆ ನಡೆಸಲಾಗಿದೆ. ಸಂಪುಟದಲ್ಲಿ ಎಷ್ಟು ಜನ ಇರಲಿದ್ದಾರೆ, ಯಾರೆಲ್ಲ ಸೇರ್ಪಡೆ ಆಗಲಿದ್ದಾರೆ ಎಂಬ ಬಗ್ಗೆ ವಿವರವಾದ ಚರ್ಚೆ ನಡೆಸಲಾಗಿಲ್ಲ ಎಂದು ಅವರು ಹೇಳಿದರು.

ಸಚಿವರಿಲ್ಲದೆ ರಾಜ್ಯದ ಸ್ಥಿತಿಗತಿಯ ನಿರ್ವಹಣೆ ಕಷ್ಟಕರವಾಗಲಿದೆ. ಆದಷ್ಟು ಬೇಗ ಈ ಬಗ್ಗೆ ನಿರ್ಧಾರ ಕೈಗೊಳ್ಳುವಂತೆ ಮನವರಿಕೆ ಮಾಡಿದ್ದೇನೆ. ಅವರಿಂದಲೂ ಸೂಕ್ತ ಸ್ಪಂದನೆ ವ್ಯಕ್ತವಾಗಿದೆ. ಮೂರ್ನಾಲ್ಕು ದಿನಗಳಲ್ಲಿ ಮತ್ತೆ ಬಂದು ವರಿಷ್ಠರೊಂದಿಗೆ ಸಮಗ್ರ ಚರ್ಚೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಅವರು ವಿವರಿಸಿದರು.

‘ಮುಖ್ಯವಾಗಿ, ಅನುಭವಿಗಳನ್ನೂ, ಹೊಸತನದ ಚಿಂತನೆಯವರನ್ನೂ ಒಳಗೊಂಡ ಕ್ರಿಯಾಶೀಲ ತಂಡವನ್ನು ಕಟ್ಟಲಿದ್ದೇನೆ. ನಾನು ಆಶಾವಾದಿ, ಆಯಾ ಸನ್ನಿವೇಶದ ಲಾಭ ಪಡೆಯಲಾರೆ ಎಂದೂ ಹೇಳಲಾರೆ’ ಎಂದು ಅವರು ಮಾರ್ಮಿಕವಾಗಿ ನುಡಿದರು.

ಜನಪರ, ದಕ್ಷ, ಸ್ವಚ್ಛ, ಉತ್ತಮ ಆಡಳಿತ ನೀಡುವ ನಿಟ್ಟಿನಲ್ಲಿ ಅಧಿಕಾರಶಾಹಿಗೆ ಚುರುಕು ಮೂಡಿಸಲಾಗುವುದು. ಬಡವರು, ಮಹಿಳೆಯರು, ದಲಿತರು, ಹಿಂದುಳಿದ ವರ್ಗಗಳ ಜನತೆಗೆ ಸರ್ಕಾರದ ಯೋಜನೆಗಳ ಲಾಭ ತಲುಪಿಸುವುದು ಈ ಸರ್ಕಾರದ ಮೊದಲ ಆದ್ಯತೆ ಎಂದು ಬೊಮ್ಮಾಯಿ ಹೇಳಿದರು.

ಪ್ರಜಾಮನ ನ್ಯೂಸ್ ಡೆಸ್ಕ್.

prajamana.com 9448797745

You May Also Like

error: Content is protected !!