23ರಿಂದಲೇ ಪದವಿ ವಿದ್ಯಾರ್ಥಿಗಳ ದಾಖಲು ಪ್ರಕ್ರಿಯೆ ಆರಂಭ

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿ ಮಾಡುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳ ಉಪ ಕುಲಪತಿಗಳ ಜತೆ ಮಹತ್ವದ ಮಾತುಕತೆ ನಡೆಸಿದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರು, ಈ ತಿಂಗಳ 23ರಿಂದಲೇ ಪದವಿ ಕಾಲೇಜುಗಳ ಪ್ರವೇಶ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಘೋಷಿಸಿದರು.

ಉಪ ಕುಲಪತಿಗಳ ಸಭೆ ನಂತರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು; ಹೊಸದಾಗಿ ರೂಪಿಸಲಾಗಿರುವ ಏಕೀಕೃತ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ ಮೂಲಕ ದಾಖಲಾತಿ ಪ್ರಕ್ರಿಯೆ ಆರಂಭ ಮಾಡಲಾಗುವುದು. ಅದರ ಮಾದರಿಯನ್ನೂ ಉದ್ಘಾಟಿಸಲಾಗುವುದು ಎಂದು ಅವರು ತಿಳಿಸಿದರು

ಹತ್ತು ವರ್ಷಗಳಲ್ಲೇ ಜಾರಿ:
ಶಿಕ್ಷಣ ನೀತಿ ಜಾರಿಗೆ ಕೇಂದ್ರ ಸರಕಾರ 15 ವರ್ಷ ಕಾಲಾವಕಾಶ ನೀಡಿದ್ದು, ರಾಜ್ಯ ಸರಕಾರ ಹತ್ತೇ ವರ್ಷಗಳಲ್ಲಿ ಅನುಷ್ಠಾನಕ್ಕೆ ತರಲು ನಿರ್ಧರಿಸಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಜಾರಿ ಮಾಡುವುದಕ್ಕೆ ಅಗಸ್ಟ್‌ 7ರಂದೇ ಆದೇಶ ಹೊರಡಿಸಲಾಗಿದ್ದು, ಅದರ ಮಾರ್ಗಸೂಚಿಯನ್ನೂ ಪ್ರಕಟಿಸಲಾಗಿದೆ ಎಂದರು ಅವರು.

ಈ ಶಿಕ್ಷಣ ನೀತಿಯಲ್ಲಿ ಮಾತೃಭಾಷೆಗೆ ಹೆಚ್ಚು ಒತ್ತು ನೀಡಲಾಗಿದೆ. ಮೊದಲಿಗಿಂತ ಹೆಚ್ಚು ವಿಸ್ತೃತವಾಗಿ ಕನ್ನಡವನ್ನು ಕಲಿಯುವ ಅವಕಾಶ ಕಲ್ಪಿಸಲಾಗಿದೆ. ಯಾವುದೇ ಕಾರಣಕ್ಕೂ ಕನ್ನಡವನ್ನು ಉಪೇಕ್ಷೆ ಮಾಡಿಲ್ಲ. ಎರಡು ವರ್ಷಗಳ ಕನ್ನಡ ಕಲಿಕೆ ಇತ್ತು. ಹಾಗೆ ನೋಡಿದರೆ ಮೊದಲು ಕಡ್ಡಾಯ ಇರಲಿಲ್ಲ. ಈಗ ಕಡ್ಡಾಯ ಮಾಡಲಾಗಿದೆ ಎಂದು ಅವರು ಹೇಳಿದರು.

2021-22ರಿಂದಲೇ ಶಿಕ್ಷಣ ನೀತಿ ಜಾರಿಗೆ ಬರುತ್ತಿರುವ ಹಿನ್ನೆಲೆಯಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿಗಳ‌ ವಿಷಯವಾರು ಮಾದರಿ ಪಠ್ಯಕ್ರಮಗಳನ್ನು ಸಿದ್ಧಪಡಿಸಲು ವಿಷಯ ತಜ್ಞರ 32 ಸಮಿತಿಗಳನ್ನು ರಚಿಸಲಾಗಿದೆ. ಈ ಪ್ರಕಾರವಾಗಿ 3 ವರ್ಷದ ಪದವಿ ಪ್ಲಸ್‌ 2 ವರ್ಷದ ಸ್ನಾತಕೋತ್ತರ ಅಥವಾ 4 ವರ್ಷದ ಆನರ್ಸ್‌ ಪದವಿ ಪ್ಲಸ್‌ 1 ವರ್ಷದ ಸ್ನಾತಕೋತ್ತರ ಪದವಿ ಅಧ್ಯಯನದ ಬಗ್ಗೆ ವಿಷಯವಾರು ಮಾದರಿ ಪಠ್ಯ ತಯಾರಿಸುವಂತೆ ಆಯಾ ಸಮಿತಿಗಳಿಗೆ ಸೂಚನೆ ನೀಡಲಾಗಿದೆ ಎಂದು ಡಾ.ಅಶ್ವತ್ಥನಾರಾಯಣ ತಿಳಿಸಿದರು.

You May Also Like

error: Content is protected !!