53ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಲೋಕಾರ್ಪಣೆ: ಸಚಿವ ಶ್ರೀರಾಮುಲು


ತುಮಕೂರು: ಭಾರತದ 75ನೇ ಸ್ವಾತಂತ್ರ್ಯ ಅಮೃತಮಹೋತ್ಸವದ ಅಂಗವಾಗಿ ಜಿಲ್ಲೆಯ ಪಾವಗಡ, ಮಧುಗಿರಿ, ಶಿರಾ ಹಾಗೂ ತುಮಕೂರಿನಲ್ಲಿ ಸುಮಾರು 53ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳನ್ನು ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಶ್ರೀರಾಮುಲು ಲೋಕಾರ್ಪಣೆ ಮಾಡಿದರು.


ವಸತಿ ಶಾಲೆಗಳ ಮಕ್ಕಳಿಗೆ ಲ್ಯಾಪ್‍ಟಾಪ್:


ವಸತಿ ಶಾಲೆಗಳಲ್ಲಿ ಕಲಿಯುತ್ತಿರುವ ಮಕ್ಕಳಿಗೆ ಲ್ಯಾಪ್ ಟಾಪ್ ನೀಡುವ ಮೂಲಕ ಮನೆಯಲ್ಲಿಯೇ ಶಿಕ್ಷಣ ಕಲಿಯಲು ಅವಕಾಶ ಮಾಡಿಕೊಡುವ ಚಿಂತನೆ ಮಾಡಲಾಗಿದೆ ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಶ್ರೀರಾಮುಲು ತಿಳಿಸಿದರು.
ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಗ್ರಾಮದಲ್ಲಿ 3 ಎಕರೆ ವಿಸ್ತೀರ್ಣದಲ್ಲಿ 17.83 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಡಾ.ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ(ಪ.ವರ್ಗ)-736ಯ ನೂತನ ಕಟ್ಟದವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ಪರಿಶಿಷ್ಟ ವರ್ಗಗಳ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗಾಗಿ ಏಕಲವ್ಯ, ಡಾ.ಬಿ.ಆರ್.ಅಂಬೇಡ್ಕರ್, ಮುರಾರ್ಜಿ ದೇಸಾಯಿ, ಅಟಲ್ ಬಿಹಾರಿ ವಸತಿ ಶಾಲೆಗಳನ್ನು ನಿರ್ಮಿಸಲಾಗಿದ್ದು, ವಸತಿ ಶಾಲೆಗೆ ಅವಶ್ಯಕವಿರುವ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗಿದೆ. ವಸತಿ ಶಾಲೆಗಳಲ್ಲಿ ವಿದ್ಯಾರ್ಥಿ ಮತ್ತು ಶಿಕ್ಷಕರಿಗೆ ಅವಶ್ಯವಿರುವ ಪೀಠೋಪಕರಣ ಹಾಗೂ ಪ್ರಯೋಗಾಲಯದ ಕೊರತೆ ಇದ್ದಲ್ಲಿ ಕೂಡಲೇ ಮಂಜೂರು ಮಾಡಲಾಗುವುದು ಎಂದು ಹೇಳಿದರು.

ಶಿಡ್ಲೆಕೋಣದ ಶ್ರೀ ಸಂಜಯಕುಮಾರ ಸ್ವಾಮೀಜಿ ಆಶೀರ್ವಚನ ನೀಡಿ, ಹಿಂದುಳಿದ ಜನಾಂಗದ ಶೈಕ್ಷಣಿಕ ಅಭಿವೃದ್ಧಿಗಾಗಿ ವಸತಿ ಶಾಲೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಹಿಂದುಳಿದ ವರ್ಗದ ಮಕ್ಕಳು ಶಿಕ್ಷಿತರಾದರೆ ಸಮಾಜ ಏಳಿಗೆಯಾಗಲಿದೆ ಎಂದು ಹೇಳಿದರು.
ಶಾಸಕ ವೆಂಕಟರಮಣಪ್ಪ ಮಾತನಾಡಿ, ಸರ್ಕಾರವು ವಸತಿ ಶಾಲೆಗಳನ್ನು ನಿರ್ಮಾಣ ಮಾಡುವ ಮೂಲಕ ಹಿಂದುಳಿದ ವರ್ಗದವರ ಶೈಕ್ಷಣಿಕ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಪಾವಗಡದಲ್ಲಿ ನಿರ್ಮಿಸಲಾಗಿರುವ ವಸತಿ ಶಾಲೆ ಸುಸಜ್ಜಿತವಾಗಿದ್ದು, ಅವಶ್ಯಕವಿರುವ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒಳಗೊಂಡಿದೆ ಎಂದರು.


1ಕೋಟಿ ವೆಚ್ಚದಲ್ಲಿ ವಾಲ್ಮೀಕಿ ಭವನ ಉದ್ಘಾಟನೆ:-


ನಂತರ ಪಾವಗಡದಲ್ಲಿ 1ಕೋಟಿ ರೂ.ವೆಚ್ಚದ ಶ್ರೀಮಹರ್ಷಿ ವಾಲ್ಮೀಕಿ ಭವನ ಉದ್ಘಾಟಿಸಿ ಮಾತನಾಡಿದ ಸಚಿವರು, ಪಾವಗಡದಲ್ಲಿ ಶ್ರೀ ವಾಲ್ಮೀಕಿ ಭವನ ನಿರ್ಮಾಣಕ್ಕೆ ನಾನೇ ಪೂಜೆ ಸಲ್ಲಿಸಿ ಈಗ ನಾನೇ ಉದ್ಘಾಟನೆ ಮಾಡುತ್ತಿರುವುದು ಖುಷಿ ವಿಚಾರವಾಗಿದೆ. ರಾಜ್ಯದ ಉದ್ದಗಲಕ್ಕೂ ವಾಲ್ಮೀಕಿ ಭವನ ನಿರ್ಮಾಣ ಮಾಡಲಾಗುತ್ತಿದೆ. ಸಮುದಾಯ ಒಗ್ಗಟ್ಟಾಗಿ ಸಮುದಾಯ ಭವನಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರಲ್ಲದೆ ಈ ಭವನದಲ್ಲಿ ವಾರಕ್ಕೊಮ್ಮೆ ರಾಮಾಯಣ ಹಾಗೂ ಶ್ರೀವಾಲ್ಮೀಕಿ ಅವರ ವಿಚಾರಧಾರೆಗಳನ್ನು ಸಾರುವ ಕಾರ್ಯಕ್ರಮಗಳನ್ನು ನಡೆಸಬೇಕು ಎಂದು ಹೇಳಿದರು.
ಪರಿಶಿಷ್ಟ ವರ್ಗಗಳ ಸಮುದಾಯಕ್ಕೆ ಪ್ರತ್ಯೇಕ ಸಚಿವಾಲಯ ಆಗಬೇಕೆಂಬ ಬೇಡಿಕೆಯನ್ನು ಮುಖ್ಯಮಂತ್ರಿ ಬೊಮ್ಮಾಯಿ ಈಡೇರಿಸಿದ್ದಾರೆ. ಕೇಂದ್ರ ಸರ್ಕಾರದಲ್ಲಿ ಪರಿಶಿಷ್ಟ ಪಂಗಡದ ಸಮುದಾಯಕ್ಕೆ ಶೇ.7ರಷ್ಟು ಮೀಸಲಾತಿ ನೀಡಲಾಗಿದೆ. ಅದೇ ರೀತಿ ರಾಜ್ಯ ಸರ್ಕಾರದಲ್ಲಿಯೂ ಶೇ.7ರಷ್ಟು ಮೀಸಲಾತಿ ಕಲ್ಪಿಸುವ ಬೇಡಿಕೆಯನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.

ಶಾಸಕ ವೆಂಕಟರಮಣಪ್ಪ ಮಾತನಾಡಿ, ದಿ. ಡಿ.ನರಸಿಂಹಯ್ಯ ಅವರು ವಾಲ್ಮೀಕಿ ಭವನ ನಿರ್ಮಾಣಕ್ಕೆ ನಿವೇಶನವನ್ನು ದಾನವಾಗಿ ನೀಡಿದ್ದ ಫಲವಾಗಿ ಸುಸಜ್ಜಿತ ವಾಲ್ಮೀಕಿ ಭವನ ನಿರ್ಮಾಣ ಮಾಡಲು ಸಾಧ್ಯವಾಗಿದೆ. ಸಾಂಸ್ಕøತಿಕ ಚಟುವಟಿಕೆ, ಸಮಾರಂಭ ಮತ್ತಿತರ ಕಾರ್ಯಕ್ರಮಗಳನ್ನು ಆಯೋಜಿಸಲು ಸಮುದಾಯವರು ಈ ಭವನದ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ವಾಲ್ಮೀಕಿ ಭವನ ನಿರ್ಮಾಣಕ್ಕೆ ನಿವೇಶನವನ್ನು ದಾನ ನೀಡಿದ ದಿ.ನರಸಿಂಹಯ್ಯ ಮತ್ತು ದೇವಿರಮ್ಮ ಅವರ ಪುತ್ರ ಓಂಕಾರ್‍ನಾಯಕ್ ಅವರನ್ನು ಸನ್ಮಾನಿಸಲಾಯಿತು.
ಶಿಡ್ಲೆಕೋಣದ ಶ್ರೀ ಸಂಜಯಕುಮಾರ ಸ್ವಾಮೀಜಿ ಆಶೀರ್ವಚನ ನೀಡಿ, ಪರಿಶಿಷ್ಟ ಪಂಗಡದ ಅಭಿವೃದ್ಧಿಗೆ ಸರ್ಕಾರ ಮತ್ತಷ್ಟು ಒತ್ತುಕೊಡಬೇಕು. ಕೇಂದ್ರ ಸರ್ಕಾರದ ಮಾದರಿಯಲ್ಲಿಯೇ ಸಮುದಾಯಕ್ಕೆ ರಾಜ್ಯ ಸರ್ಕಾರವು ಶೇ.7ರಷ್ಟು ಮೀಸಲಾತಿ ಕಲ್ಪಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕ ಪಿ.ಎಸ್. ಕಾಂತರಾಜು, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎನ್. ತ್ಯಾಗರಾಜು, ವಾಲ್ಮೀಕಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಕವಿತಾ, ಗ್ರಾಮ ಪಂಚಾಯತ್ ಅಧ್ಯಕ್ಷೆ ರಮಾದೇವಿ, ಉಪವಿಭಾಗಾಧಿಕಾರಿ ಸೋಮಪ್ಪ ಕಡಕೋಳ, ಇಲಾಖೆಯ ಅಧಿಕಾರಿಗಳಾದ ಎಚ್. ಶ್ರೀನಿವಾಸ್, ರಾಜ್‍ಕುಮಾರ್ ಸೇರಿದಂತೆ ಇತರರಿದ್ದರು.
ಬಳಿಕ ಸಚಿವರು, ಮಧುಗಿರಿ ತಾಲೂಕಿನ ದೊಡ್ಡೇರಿ ಹೋಬಳಿ ಸೋದೇನಹಳ್ಳಿಯಲ್ಲಿ 18 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಡಾ. ಅಂಬೇಡ್ಕರ್ ವಸತಿ ಶಾಲೆ ಹಾಗೂ ಶಿರಾ ನಗರದಲ್ಲಿ 3.95ಕೋಟಿ ರೂ. ವೆಚ್ಚದ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದ ನೂತನ ಕಟ್ಟಡಗಳನ್ನು ಉದ್ಘಾಟಿಸಿದರು.

ಪ್ರಜಾಮನ ನ್ಯೂಸ್ ಡೆಸ್ಕ್.

prajamana.com 9448797745

You May Also Like

error: Content is protected !!