ರಾಜ್ಯದಲ್ಲಿ ಅಕ್ಟೋಬರ್ 10ರವರೆಗೆ ಧಾರಾಕಾರ ಮಳೆ

ಬೆಂಗಳೂರು: ರಾಜ್ಯದಲ್ಲಿ ಮಳೆಯ(Heavy Rainfall) ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈಗಾಗಲೇ ಅಕ್ಟೋಬರ್ 6 ಕ್ಕೆ ಮುಂಗಾರು(Monsoon) ಅಂತ್ಯವಾಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಇನ್ನೂ ಅಕ್ಟೋಬರ್ 10ವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)ತಿಳಿಸಿದೆ.

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಅಕ್ಟೋಬರ್ 10ರ ತನಕ ಮಳೆ ಮುಂದುವರೆಯಲಿದೆ ಎಂದು ಎಚ್ಚರಿಕೆ ನೀಡಿದೆ. ನೈರುತ್ಯ ಬಂಗಾಳ ಕೊಲ್ಲಿಯಿಂದ ಪೂರ್ವ ಮಧ್ಯ ಅರೇಬಿಯನ್ ಸಮುದ್ರದವರೆಗೆ ಹಾಗೂ ತಮಿಳುನಾಡು ಮತ್ತು ಕರ್ನಾಟಕದಾದ್ಯಂತ ಒಂದು ಮುಂಗಾರು ತೊಟ್ಟಿ ವಿಸ್ತರಿಸಿದ್ದು, ಇದು ರಾಜ್ಯದಲ್ಲಿ ಮಳೆಗೆ ಕಾರಣವಾಗಿದೆ.

ಶುಕ್ರವಾರ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಕೊಡಗಿನಲ್ಲಿ ಮಳೆ ಹೆಚ್ಚಾಗುವ ಸೂಚನೆ ಇದ್ದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೇ ಉತ್ತರ ಒಳನಾಡಿನ ಜಿಲ್ಲೆಗಳಾದ ತುಮಕೂರು, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಬೀದರ್, ಕೊಪ್ಪಳ, ರಾಯಚೂರು, ಕಲಬುರಗಿ, ವಿಜಯಪುರ, ಧಾರವಾಡ, ಗದಗ ಜಿಲ್ಲೆಗಳಲ್ಲಿಸಹ ಹೆಚ್ಚಿನ ಮಳೆ ನಿರೀಕ್ಷೆ ಇದೆ.

ಬೆಂಗಳೂರಿನಲ್ಲಿ ಮಳೆ ಆರಂಭ

ಅಲ್ಲದೇ ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೆ ಮಳೆ ಆರಂಭವಾಗಿದ್ದು, ಕೆಲ ಪ್ರದೇಶಗಳಲ್ಲಿ ಜಿಟಿಜಿಟಿ ಮಳೆ ಇದ್ದರೆ, ಇನ್ನು ಕೆಲವೆಡೆ ಹೆಚ್ಚಿನ ಮಳೆಯಾಗುತ್ತಿದೆ. ಸಿಲಿಕಾನ್ ಸಿಟಿಯಲ್ಲಿ ಕಳೆದ ಕೆಲವು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಳೆಗಾಲದ ನಿರ್ವಹಣೆಗಾಗಿ 63 ಉಪವಿಭಾಗಗಳಲ್ಲಿ ತಾತ್ಕಾಲಿಕ ನಿಯಂತ್ರಣ ಕೊಠಡಿಯನ್ನು ಆರಂಭಿಸಿದೆ. ಅಕ್ಟೋಬರ್ ಅಂತ್ಯದವರೆಗೂ ಈ ನಿಯಂತ್ರಣ ಕೊಠಡಿಗಳು ಕಾರ್ಯ ನಿರ್ವಹಿಸಲಿವೆ ಎಂದು ಬಿಬಿಎಂಪಿ ತಿಳಿಸಿದೆ.

ಮುಂದಿನ 24 ಗಂಟೆಗಳಲ್ಲಿ ಹವಾಮಾನ ಹೇಗಿರಲಿದೆ?

ಮುಂದಿನ 24 ಗಂಟೆಗಳಲ್ಲಿ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ, ಕೊಂಕಣ ಮತ್ತು ಗೋವಾ, ಮಧ್ಯ ಮಹಾರಾಷ್ಟ್ರ, ಮರಾಠವಾಡ ಮತ್ತು ವಿದರ್ಭ, ಲಕ್ಷದ್ವೀಪ, ಕರಾವಳಿ ಒಡಿಶಾ, ಪಶ್ಚಿಮ ಬಂಗಾಳ ಮತ್ತು ಈಶಾನ್ಯ ಭಾರತದ ಪ್ರತ್ಯೇಕ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಅಕ್ಟೋಬರ್ 10ರವರೆಗೆ ಯಾವ್ಯಾವ ರಾಜ್ಯದಲ್ಲಿ ಮಳೆ?

ಕರ್ನಾಟಕದ ದಕ್ಷಿಣ ಒಳನಾಡು, ಕೇರಳ, ತಮಿಳುನಾಡು, ಪುದುಚೇರಿ, ಕಾರೈಕಲ್, ಮಧ್ಯ ಮಹಾರಾಷ್ಟ್ರ, ದಕ್ಷಿಣ ಕೊಂಕಣ, ಗೋವಾ, ದಕ್ಷಿಣ ಅಸ್ಸಾಂ, ಮೇಘಾಲಯ, ತ್ರಿಪುರ, ಆಂಧ್ರದ ಕರಾವಳಿ, ರಾಯಲಸೀಮೆ ಹಾಗೂ ಕರ್ನಾಟಕ ಕರಾವಳಿಯಲ್ಲಿ ಅಧಿಕ ಮಳೆ ಮುನ್ಸೂಚನೆ ನೀಡಲಾಗಿದೆ. ಪಶ್ಚಿಮ ಬಂಗಾಳ, ಗೋವಾ, , ಛತ್ತೀಸ್‌ಗಢ್, ಅಸ್ಸಾಂ, ಮೇಘಾಲಯ, ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ದೆಹಲಿ, ಜಾರ್ಖಂಡ್, ಗುಜರಾತ್​ ರಾಜ್ಯಗಳಲ್ಲಿ ಹೆಚ್ಚಿನ ಮಳೆಯ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಪ್ರಜಾಮನ ನ್ಯೂಸ್ ಡೆಸ್ಕ್.

prajamana.com 9448797745

You May Also Like

error: Content is protected !!