ಗೂಳೂರು ಮಹಾ ಗಣಪತಿ ಭಕ್ತರಿಗೆ ದರ್ಶನ ಭಾಗ್ಯ

ತುಮಕೂರು: ಇತಿಹಾಸ ಪ್ರಸಿದ್ದ ಗೂಳೂರು ಮಹಾ ಗಣಪತಿ ಮೂರ್ತಿಯನ್ನು ಬಲಿಪಾಢ್ಯಮಿಯಂದು ವಿವಿಧ ಧಾರ್ಮಿಕ ವಿಧಿ ವಿಧಾನ ಹಾಗೂ ಸಂಪ್ರದಾಯದೊಂದಿಗೆ ಪ್ರತಿಷ್ಠಾಪಿಸಿದ್ದು, ಒಂದು ತಿಂಗಳ ಕಾಲ ಭಕ್ತರಿಗೆ ಬೃಹತ್ ಗಣೇಶಮೂರ್ತಿಯ ದರ್ಶನ ಭಾಗ್ಯ ದೊರೆಯಲಿದೆ.

ಐತಿಹಾಸಿಕ ಹಿನ್ನೆಲೆ ಹೊಂದಿರುವ ಗೂಳೂರು ಮಹಾಗಣಪತಿಯನ್ನು ಕಾರ್ತಿಕ ಮಾಸದಲ್ಲಿ 1 ತಿಂಗಳ ಕಾಲ ಪ್ರತಿಷ್ಠಾಪಿಸಿ ಪ್ರತಿನಿತ್ಯ ವಿಶೇಷ ಪೂಜಾ ಕೈಂಕರ್ಯಗಳೊಂದಿಗೆ ಭಕ್ತರ ದರ್ಶನಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು.

ಪ್ರತಿ ವರ್ಷದಂತೆ ಈ ವರ್ಷವೂ ಬಲಿಪಾಡ್ಯಮಿ ದಿನದಂದು ಗಣೇಶಮೂರ್ತಿಗೆ ವಿಶೇಷ ಪೂಜೆಯೊಂದಿಗೆ ಕಣ್ಣುಧಾರಣೆ ಮಾಡಲಾಯಿತು.

ನಿನ್ನೆಯಿಂದ ಆರಂಭವಾಗಿರುವ ಗಣೇಶಮೂರ್ತಿಯ ವಿಶೇಷ ಪೂಜಾ ಕೈಂಕರ್ಯ ಇನ್ನು ಒಂದು ತಿಂಗಳ ಕಾಲ ಪ್ರತಿನಿತ್ಯ ನೆರವೇರಲಿದೆ.

ಈ ಬೃಹತ್ ಗಣೇಶ ಮೂರ್ತಿಗೆ ವಿಶೇಷ ಐತಿಹ್ಯವಿದ್ದು, 1 ತಿಂಗಳ ಕಾಲ ಗ್ರಾಮದ ಪ್ರತಿಯೊಂದು ಮನೆಯವರು ನಿತ್ಯ ವಿಶೇಷ ಪೂಜೆ ಸಲ್ಲಿಸುವ ಮೂಲಕ ಭಕ್ತಿ ಸಮರ್ಪಿಸುವರು.

ಪ್ರತಿದಿನ ರಾತ್ರಿ 9 ಗಂಟೆಗೆ ಮಹಾಮಂಗಳಾರತಿ ನಡೆಯಲಿದೆ. 18 ಕೋಮಿನವರು ಗೂಳೂರು ಗಣಪನಿಗೆ ವಿವಿಧ ಸೇವೆ ಸಲ್ಲಿಸಲಿದ್ದಾರೆ.

ಗಣೇಶ ಚೌತಿ ಸಂದರ್ಭದ ಬದಲು ಕಾರ್ತಿಕ ಮಾಸದಲ್ಲಿ ಗೂಳೂರಿನಲ್ಲಿ ಗಣೇಶ ಉತ್ಸವ ನಡೆಯುವುದು ವಿಶೇಷವೆನಿಸಿದೆ. ಗಣೇಶ ಚೌತಿಯಂದು ಗಣೇಶಮೂರ್ತಿ ನಿರ್ಮಾಣ ಆರಂಭವಾಗಲಿದ್ದು, ಆಯುಧಪೂಜೆ, ವಿಜಯದಶಮಿ ಹೊತ್ತಿಗೆ ಮೂರ್ತಿ ಒಂದು ಆಕಾರಕ್ಕೆ ಬರಲಿದ್ದು, ಆ ಸಂದರ್ಭದಲ್ಲಿ ಅದರ ನಾಬಿಯೊಳಗೆ ಚಿಕ್ಕಗಣಪತಿ ಕೂರಿಸಲಾಗುವುದು. ಕಾರ್ತಿಕ ಪಾಡ್ಯ ಪ್ರಾರಂಭವಾಗುವ ವೇಳೆಗೆ ಸರ್ವಾಲಂಕಾರಭೂಷಿತನಾಗಿ ರೂಪುಗೊಂಡು ಬಲಿಪಾಢ್ಯಮಿಯಿಂದ ಭಕ್ತರಿಗೆ ದರ್ಶನ ಭಾಗ್ಯ ಪ್ರಾಪ್ತಿಯಾಗುತ್ತಿದೆ.

ಎರಡು ದಿನ ಜಾತ್ರೆ

ಸತತ ಒಂದು ತಿಂಗಳ ಕಾಲ ಭಕ್ತರಿಗೆ ದರ್ಶನ ನೀಡುವ ಗೂಳೂರು ಗಣೇಶಮೂರ್ತಿಯ ಜಾತ್ರಾ ಮಹೋತ್ಸವವನ್ನು ಪದ್ದತಿ ಪ್ರಕಾರ ಅಮಾವಾಸ್ಯಯಾದ 3 ದಿನದ ನಂತರ ಅಂದರೆ ಡಿ. 11 ಮತ್ತು 12 ರಂದು ಗೂಳೂರು ಗಣೇಶ ಜಾತ್ರಾ ಮಹೋತ್ಸವ ನಡೆಯಲಿದೆ ಎಂದು ಗೂಳೂರು ಶ್ರೀ ಮಹಾಗಣಪತಿ ಭಕ್ತ ಮಂಡಳಿ ಅಧ್ಯಕ್ಷ ಜಿ.ಎಸ್. ಶಿವಕುಮಾರ್ ತಿಳಿಸಿದರು.

ಡಿ. 11 ರಂದು ರಾತ್ರಿ 18 ಕೋಮಿನ ಜನರ ಸಮ್ಮುಖದಲ್ಲಿ ಗಣೇಶಮೂರ್ತಿಯನ್ನು ದೇವಾಲಯದಿಂದ ಹೊರ ತಂದು ಗ್ರಾಮದ ಪ್ರಮುಖ ಬೀದಿಗಳಲ್ಲಿ ಅದ್ದೂರಿ ಮೆರವಣಿಗೆ ನಡೆಸಲಾಗುವುದು. ಡಿ. 12 ರಂದು ಸಂಜೆ 5 ಗಂಟೆಯ ನಂತರ ಗೂಳೂರು ಕೆರೆಯಲ್ಲಿ ವೈಭವಯುತವಾಗಿ ವಿಸರ್ಜಿಸಲಾಗುವುದು ಎಂದು ಅವರು ಹೇಳಿದರು.

ಒಂದು ತಿಂಗಳ ಕಾಲ ಗಣೇಶ ಮೂರ್ತಿಯ ದರ್ಶನೋತ್ಸವಕ್ಕೆ ಜಿಲ್ಲೆ, ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದಲೂ ಭಕ್ತಾದಿಗಳು ಬರುತ್ತಾರೆ. ಕೋವಿಡ್ ಸಮಯ ಇದಾಗಿರುವುದರಿಂದ ಪ್ರತಿಯೊಬ್ಬರು ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಸಿ ದೇವಾಲಯಕ್ಕೆ ಬರುವಂತೆ ಮನವಿ ಮಾಡಲಾಗಿದೆ. ಮುಂಜಾಗ್ರತೆಯಾಗಿ ಕೋವಿಡ್ ಮಾರ್ಗಸೂಚಿಗಳನ್ನು ದೇವಾಲಯದಲ್ಲಿ ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ ಎಂದರು.

You May Also Like

error: Content is protected !!