ತುಮಕೂರು: ತುಮಕೂರು ಜಿಲ್ಲೆಯ ಸಮಸ್ತ ಸಾರ್ವಜನಿಕರು ಆಗಸ್ಟ್ 13, 2022ರಿಂದ ಆಗಸ್ಟ್ 15,2022ರವರೆಗೆ ತಮ್ಮ ತಮ್ಮ ಮನೆಗಳ ಮೇಲೆ ರಾಷ್ಟ್ರಧ್ವಜವನ್ನು ಹಾರಿಸಿ ದೇಶಭಕ್ತಿ, ದೇಶಾಭಿಮಾನವನ್ನು ಬಿಂಬಿಸುವ ಮೂಲಕ ತಮ್ಮ ರಾಷ್ಟ್ರಪ್ರೇಮವನ್ನು ಅಭಿವ್ಯಕ್ತಿಗೊಳಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ಕೋರಿದ್ದಾರೆ.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸೂಚನೆಯಂತೆ, ೭೫ನೇ ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ ದಿನಾಂಕ:13-8-2022ರಿಂದ ದಿನಾಂಕ:15-8-2022ರವರೆಗೆ ಹರ್ ಘರ್ ತಿರಂಗಾ ಅಭಿಯಾನ ಕಾರ್ಯಕ್ರಮವನ್ನು ದೇಶದಾದ್ಯಂತ ಹಮ್ಮಿಕೊಳ್ಳಲಾಗಿದೆ. ಈ ಅಭಿಯಾನದಲ್ಲಿ ರಾಜ್ಯದಲ್ಲಿರುವ ಎಲ್ಲಾ ಮನೆಗಳು, ಸರ್ಕಾರಿ ಕಟ್ಟಡಗಳು, ಅರೆ ಸರ್ಕಾರಿ ಕಟ್ಟಡಗಳು, ಸಂಘ-ಸಂಸ್ಥೆಗಳ ಕಟ್ಟಡಗಳು ಹಾಗೂ ಇತರೆ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರ ಧ್ವಜವನ್ನು ಹಾರಿಸಿ ದೇಶಪ್ರೇಮವನ್ನು ಅಭಿವ್ಯಕ್ತಗೊಳಿಸಬೇಕಿದೆ ಎಂದು ಅವರು ತಿಳಿಸಿದ್ದಾರೆ.
ಈ ಹಿನ್ನಲೆಯಲ್ಲಿ ಆಗಸ್ಟ್ 06,2022ರಂದು ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಛೇರಿಯ ಆವರಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ, ತುಮಕೂರು ವತಿಯಿಂದ ರಾಷ್ಟ್ರಧ್ವಜಗಳನ್ನು ವಿತರಿಸುವ ಮುಖೇನ ಅಧಿಕಾರಿಗಳು, ನೌಕರರು, ಕಲಾವಿದರು, ವಿವಿಧ ಸಂಘ-ಸಂಸ್ಥೆಗಳ ಮುಖ್ಯಸ್ಥರಿಗೆ ಪ್ರೇರೇಪಣೆ ನೀಡಲಾಯಿತು.
ಈ ಕಾರ್ಯಕ್ರಮದಲ್ಲಿ ಸಹಾಯಕ ನಿರ್ದೇಶಕರಾದ ಡಿ.ಎಂ.ರವಿಕುಮಾರ್, ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ಅಧಿಕಾರಿಗಳಾದ ಕೆ.ಶ್ರೀನಿವಾಸ್, ಸಹಾಯಕ ನಿರ್ದೇಶಕರಾದ ವಿಶ್ವೇಶ್ವರ್, ಜಿಲ್ಲಾ ಮೀನುಗಾರಿಕೆ ಉಪನಿರ್ದೇಶಕರಾದ ವಿಶ್ವನಾಥ್ ಅವರುಗಳು ಭಾಗವಹಿಸಿದ್ದರು.
Related