ತುಮಕೂರು : ವೈದ್ಯಕೀಯ ಪೂರ್ವ ಅನುಮತಿಯಿಲ್ಲದೆ ಅನಗತ್ಯವಾಗಿ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆಗಳನ್ನು ಮಾಡದೇ, ಸಹಜ ಹೆರಿಗೆ ಪ್ರಮಾಣವನ್ನು ಹೆಚ್ಚಿಸಬೇಕು, ತಾಯಿ ಮಕ್ಕಳ ಮರಣ ಪ್ರಮಾಣವನ್ನು ಶೂನ್ಯಕ್ಕೆ ಇಳಿಸಬೇಕು ಹಾಗೂ ಎಲ್ಲ ತಾಲ್ಲೂಕುಗಳಲ್ಲಿಯೂ ಗರ್ಭಿಣಿ ಮಹಿಳೆಯರ ನೋಂದಣಿ ಕಡ್ಡಾಯ ಮಾಡಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.
ಆರೋಗ್ಯ ಇಲಾಖೆಯ ಎಲ್ಲ ವೈದ್ಯರುಗಳು ಮತ್ತು ನೌಕರರು ತಮ್ಮ ತಮ್ಮ ಕೇಂದ್ರ ಸ್ಥಾನದಲ್ಲಿ ಲಭ್ಯವಿರಬೇಕು ಮತ್ತು ಈ ಮೂಲಕ ಸದಾಕಾಲ ಜನರ ಸೇವೆಗೆ ಸಿದ್ಧರಿರಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ತಮ್ಮ ಕಚೇರಿಯ ನ್ಯಾಯಾಲಯದ ಸಭಾಂಗಣದಲ್ಲಿಂದು ಆರೋಗ್ಯ ಇಲಾಖೆಯ ಜಿಲ್ಲಾ ಮಟ್ಟದ ಲಸಿಕಾ ಕಾರ್ಯಪಡೆ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಪ್ರಾಥಮಿಕ ಆರೋಗ್ಯ ಸಂರಕ್ಷಣಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿನ ಗ್ರಾಮಗಳಿಗೆ ಭೇಟಿ ನೀಡಿ ಗರ್ಭಿಣಿ ಸ್ತ್ರೀಯರ ಆರೋಗ್ಯ ತಪಾಸಣೆ ನಡೆಸಬೇಕು. ಸಮಸ್ಯೆಗಳು ಕಂಡು ಬಂದಲ್ಲಿ ತಾಲ್ಲೂಕು ಮಟ್ಟದ ಆಸ್ಪತ್ರೆಗಳಿಗೆ ಸೇರಿಸಬೇಕು. ಈ ನಿಟ್ಟಿನಲ್ಲಿ ಡಿಹೆಚ್‌ಓ ತಮ್ಮ ಅಧೀನ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕೆಂದು ಸೂಚಿಸಿದರು.
ಜಿಲ್ಲೆಯಲ್ಲಿ 2ಸಾವಿರಕ್ಕೂ ಅಧಿಕ ಆಶಾ ಕಾರ್ಯಕರ್ತೆಯರು ಕಾರ್ಯನಿರ್ವಹಿಸುತ್ತಿದ್ದು, ತಮ್ಮ ವ್ಯಾಪ್ತಿಯ ಗರ್ಭೀಣಿ ಸ್ತ್ರೀಯರು ಮತ್ತು ಮಕ್ಕಳ ಆರೈಕೆಯ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು. ಗರ್ಭಿಣಿ ಸ್ತ್ರೀಯರ ಮನೆಗಳಿಗೆ ಭೇಟಿ ನೀಡಿ ಅವರಿಗೆ ಸರ್ಕಾರದಿಂದ ದೊರೆಯುವ ಆರೋಗ್ಯ ಸೇವೆಗಳು ಸಕಾಲದಲ್ಲಿ ಲಭ್ಯವಾಗುವಂತೆ ನೋಡಿಕೊಳ್ಳಬೇಕಾಗಿದ್ದು ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮವಹಿಸಬೇಕು ಎಂದು ತಿಳಿಸಿದರು.
ಅಂಗನವಾಡಿ ಕಾರ್ಯಕರ್ತೆಯರು ಮನೆಗಳಿಗೆ ಭೇಟಿ ನೀಡಿ ಗರ್ಭಿಣಿ ಸ್ತ್ರೀಯರನ್ನು ನೋಂದಾಯಿಸಿಕೊಂಡು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ದೊರೆಯುವ ಪೌಷ್ಟಿಕ ಆಹಾರ ಮತ್ತು ಅಗತ್ಯ ಪೋಷಕಾಂಶಗಳ ಮಾತ್ರೆಗಳನ್ನು ನೀಡಿ ಅವರ ಆರೋಗ್ಯ ಕಾಳಜಿಯತ್ತ ಗಮನಹರಿಸಬೇಕು. ಜಿಲ್ಲೆಯ ಎಲ್ಲಾ ಸಿಡಿಪಿಓ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಇಲಾಖೆಯ ಉಪನಿರ್ದೇಶಕ ಎಂ.ಎಸ್. ಶ್ರೀಧರ್ ಅವರಿಗೆ ಸೂಚಿಸಿದರು.
ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಡಿಯಲ್ಲಿ ಜಿಲ್ಲೆಯ ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಂತೆ ಸಕಾಲದಲ್ಲಿ ಲಸಿಕೆ ನೀಡುವುದು ಕಡ್ಡಾಯವಾಗಿರುತ್ತದೆ. ಆಯಾ ಕೇಂದ್ರಗಳ ಆಡಳಿತ ವೈದ್ಯಾಧಿಕಾರಿಗಳು, ಪ್ರಾಥಮಿಕ ಆರೋಗ್ಯ ಸಂರಕ್ಷಣಾಧಿಕಾರಿಗಳು, ಆಶಾ ಕಾರ್ಯಕರ್ತೆಯರ ಮೂಲಕ ಶೇ.೧೦೦ರಷ್ಟು ಲಸಿಕಾಕರಣ ಆಗುವಂತೆ ಕ್ರಮಕೈಗೊಳ್ಳಬೇಕೆಂದು ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.
ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸಮುದಾಯದ ಆರೋಗ್ಯವನ್ನು ಕಾಪಾಡುವಲ್ಲಿ ಕಾಳಜಿವಹಿಸಬೇಕು. ಹೆರಿಗೆ ಸೌಲಭ್ಯ ಸೇರಿ ಅಗತ್ಯ ವೈದ್ಯಕೀಯ ಸೌಲಭ್ಯಗಳು ಲಭ್ಯವಿರುವಂತೆ ನೋಡಿಕೊಳ್ಳಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಜನನಿ ಸುರಕ್ಷಾ ಯೋಜನೆಯಡಿ ಗರ್ಭಿಣಿ ಸ್ತ್ರೀಯರು ನೇರ ನಗದು ವರ್ಗಾವಣೆಯ ಮೂಲಕ ಆರ್ಥಿಕ ನೆರವನ್ನು ಪಡೆಯಲು ತಾಯಿ ಕಾರ್ಡ್‌ಗೆ ವೈದ್ಯಾಧಿಕಾರಿಗಳ ಸಹಿ ಅಗತ್ಯವಾಗಿದ್ದು, ಸಹಿಯನ್ನು ಮಾಡಿಕೊಡಬೇಕು ಎಂದು ಸೂಚಿಸಿದರು.
ನಗರ ಪ್ರದೇಶದ ಸಮುದಾಯಕ್ಕೆ ಸಮಗ್ರ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ನಮ್ಮ ಕ್ಲಿನಿಕ್ (ನಗರ ಆರೋಗ್ಯ ಮತ್ತು ಕ್ಷೇಮಕೇಂದ್ರ)ಗಳನ್ನು ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿದೆ. ಸರ್ಕಾರದ ಮಾರ್ಗಸೂಚಿ ಅನ್ವಯ ಅಗತ್ಯ ಕ್ರಮಕೈಗೊಂಡು ನಮ್ಮ ಕ್ಲಿನಿಕ್‌ಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು.
ವಿಕಲಚೇತನರಿಗೆ ವಿಶಿಷ್ಟ ಗುರುತಿನ ಚೀಟಿ(ಯುಡಿಐಡಿ) ನೀಡಲು ಅಗತ್ಯ ಕ್ರಮಕೈಗೊಳ್ಳಬೇಕು ಜೊತೆಗೆ ಆಯುಷ್ಮಾನ್ ಭಾರತ್ ಹೆಲ್ತ್ ಅಕೌಂಟ್(ಆಭಾ) ಕಾರ್ಡ್‌ಗಳನ್ನು ಗ್ರಾಮ ಒನ್ ಮೂಲಕ ನಾಗರಿಕರಿಗೆ ಒದಗಿಸಲು ತ್ವರಿತಗತಿಯಲ್ಲಿ ಕ್ರಮಕೈಗೊಳ್ಳಬೇಕು ಎಂದು ಅವರು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಮಂಜುನಾಥ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ|| ಟಿ.ಎ ವೀರಭದ್ರಯ್ಯ, ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ|| ಕೇಶವರಾಜ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ|| ಮೋಹನ್ ದಾಸ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ|| ರೇಖಾ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಎನ್ ಅಂಜನಪ್ಪ, ಸೇರಿದಂತೆ ಜಿಲ್ಲೆಯ ಎಲ್ಲಾ ತಾಲ್ಲೂಕು ವೈದ್ಯಾಧಿಕಾರಿಗಳು, ಸಹಾಯಕ ವೈದ್ಯಾಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.