ಮಾದಕ ವ್ಯಸನದಿಂದ ದೂರವಿರುವ ಬಗ್ಗೆ ಜಾಗೃತಿ ಮೂಡಿಸಲು ಕ್ರಮವಹಿಸಿ: ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಸೂಚನೆ

ತುಮಕೂರು: ಕೇಂದ್ರ ಸರ್ಕಾರದ ನಶ ಮುಕ್ತ ಭಾರತ ಅಭಿಯಾನದಡಿ ಜಿಲ್ಲೆಯಲ್ಲಿ ಮಾದಕ ವ್ಯಸನಿಗಳಿಗೆ ವ್ಯಸನದಿಂದ ದೂರವಿರುವಂತೆ ಮಾಹಿತಿ, ಶಿಕ್ಷಣ, ಸಂವಹನದ ಮೂಲಕ ಜಾಗೃತಿ ಮೂಡಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಪೋಸ್ಟರ್‌ಗಳನ್ನು ಹಾಕಿ ಅರಿವು ಮೂಡಿಸಬೇಕು. ಈ ನಿಟ್ಟಿನಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಆರೋಗ್ಯಾಧಿಕಾರಿಗಳು ಸೂಕ್ತ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ತಿಳಿಸಿದರು.

ತಮ್ಮ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿ ಮಾತನಾಡಿದ ಅವರು, ಮಾದಕ ವಸ್ತುಗಳ ಬಳಕೆ ಹಾನಿಕಾರವಾಗಿದ್ದು, ಜಿಲ್ಲೆಯಲ್ಲಿ ವ್ಯಾಪಕ ಪ್ರಚಾರ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು. ಜಿಲ್ಲೆಯಲ್ಲಿರುವ ಮದ್ಯವರ್ಜನ ಮತ್ತು ಸಮಗ್ರ ಪುನರ್ವಸತಿ ಕೇಂದ್ರಗಳ ಮೂಲಕ ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದು ಅವರು ತಿಳಿಸಿದರು.

ಜಿಲ್ಲೆಯಲ್ಲಿ ಲಸಿಕಾಕರಣ ಗುರಿ ತಲುಪಬೇಕು. ಆಯುಷ್ಮಾನ್ ಭಾರತ್ ಹೆಲ್ತ್ ಅಕೌಂಟ್(ಆಭಾ) ಕಾರ್ಡುಗಳ ಮೂಲಕ ಸಾರ್ವಜನಿಕರು ಉಚಿತ ಆರೋಗ್ಯ ಸೇವೆಗಳನ್ನು ಪಡೆಯಬಹುದಾಗಿದೆ. ಗ್ರಾಮ ಒನ್ ಕೇಂದ್ರಗಳಲ್ಲಿ ಆಭಾ ಕಾರ್ಡುಗಳನ್ನು ನೀಡುವುದರ ಮೂಲಕ ನಿಗಧಿಪಡಿಸಿರುವ ಗುರಿ ತಲುಪಬೇಕು. ಶಾಲಾ ಮಕ್ಕಳಿಗೆ ಆಭಾ ಕಾರ್ಡುಗಳನ್ನು ಒದಗಿಸಲು ಕ್ರಮವಹಿಸಬೇಕು ಈ ದಿಸೆಯಲ್ಲಿ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದು ಸೂಚಿಸಿದರು.

ವಿಕಲಚೇತನರಿಗೆ ವಿಶಿಷ್ಟ ಗುರುತಿನ ಚೀಟಿ(ಯುಡಿಐಡಿ) ನೀಡುವ ಕಾರ್ಯ ಪ್ರಗತಿಯಲ್ಲಿದೆ ಎಂದ ಅವರು ಜಿಲ್ಲೆಯಲ್ಲಿರುವ ಕ್ಷಯ ರೋಗಿಗಳಿಗೆ ಪೌಷ್ಟಿಕಾಹಾರದ ಅಗತ್ಯತೆಯಿದ್ದು, ಆಸಕ್ತರು ರೋಗಿಗಳನ್ನು 6 ತಿಂಗಳ ಕಾಲ ದತ್ತು ತೆಗೆದುಕೊಂಡು ಪೌಷ್ಟಿಕಾಹಾರ ಒದಗಿಸಬಹುದಾಗಿದೆ ಎಂದರು.

ಜಿಲ್ಲೆಯಲ್ಲಿರುವ 2061 ಕೆರೆಗಳ ಪೈಕಿ 1560 ಕೆರೆಗಳು ಜಿಲ್ಲಾ ಪಂಚಾಯತ್ ವ್ಯಾಪ್ತಿಗೆ ಬರುತ್ತವೆ. ಅಂತಹ ಕೆರೆಗಳು ಒತ್ತುವರಿಯಾಗಿದ್ದಲ್ಲಿ ಕೂಡಲೆ ತೆರವುಗೊಳಿಸಿ ಬೌಂಡರಿಯನ್ನು ಗುರುತಿಸಬೇಕು. ಸಮಸ್ಯೆಗಳಿದ್ದಲ್ಲಿ ಸ್ಥಳೀಯ ಪಿಡಿಓ, ಗ್ರಾಮ ಲೆಕ್ಕಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ತಹಶೀಲ್ದಾರ್ ಹಾಗೂ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ವರದಿ ನೀಡಬೇಕು ಎಂದು ತಿಳಿಸಿದರು.

ಸ್ಮಶಾನ ಭೂಮಿಗೆ ಹದ್ದುಬಸ್ತ್ ಮಾಡಿಸುವುದು, ಕೆರೆ ಒತ್ತುವರಿ ತೆರವುಗೊಳಿಸುವುದು, ಘನತ್ಯಾಜ್ಯ ವಿಲೇವಾರಿ ಘಟಕಗಳಿಗೆ ನಿವೇಶನ ಒದಗಿಸುವುದು, ಅಂಗನವಾಡಿ ಕೇಂದ್ರಗಳಿಗೆ ನಿವೇಶನ ನೀಡುವುದು, ಮುಜರಾಯಿ ದೇವಸ್ಥಾನಗಳ ಖಾತೆ ಮಾಡಿಸುವುದು ಸೇರಿದಂತೆ ಅಗತ್ಯ ಕೆಲಸಗಳನ್ನು ಗ್ರಾಮಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಲೆಕ್ಕಾಧಿಕಾರಿಗಳು ಸಮನ್ವಯದಿಂದ ಕೆಲಸ ನಿರ್ವಹಿಸಬೇಕು ಎಂದು ತಹಸಿಲ್ದಾರ್ ಮತ್ತು ಕಾರ್ಯನಿರ್ವಾಹಣಾಧಿಕಾರಿಗಳು ಅವರು ತಮ್ಮ ಅಧೀನ ಅಧಿಕಾರಿಗಳಿಗೆ ನಿರ್ದೇಶಿಸಬೇಕು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಮಳೆಯಿಂದಾಗಿ ಮನೆಹಾನಿ ಮತ್ತು ಬೆಳೆಹಾನಿ ಪ್ರಕರಣಗಳು ವರದಿಯಾಗಿದ್ದು ಮನೆಹಾನಿ ಪ್ರಮಾಣವನ್ನು ಎ/ಬಿ1/ಬಿ2/ಸಿ ಕೆಟಗೆರಿಗಳಾಗಿ ವಿಂಗಡಿಸಿ ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗಿದೆ. ವಿವಿಧ ಹಂತಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಶೀಘ್ರ ವಿಲೇವಾರಿ ಮಾಡಬೇಕಲ್ಲದೇ ನಷ್ಟ ಉಂಟಾದ ಬೆಳೆ ವಿವರಗಳನ್ನು ಪರಿಹಾರ ಪೋರ್ಟಲ್‌ನಲ್ಲಿ ಅಗತ್ಯ ದಾಖಲೆಗಳೊಂದಿಗೆ ನಮೂದಿಸಬೇಕು ಎಂದು ತಿಳಿಸಿದರು.

ಕೇಂದ್ರ ಚುನಾವಣಾ ಆಯೋಗವು ಮತದಾರರ ಗುರುತಿನ ಚೀಟಿಗೆ ಆಧಾರ್ ಸಂಖ್ಯೆ ಜೋಡಣೆ ಮಾಡುವಂತೆ ನಿರ್ದೇಶನ ನೀಡಿದ್ದು, ಜಿಲ್ಲೆಯಲ್ಲಿ ಶೇ.81ರಷ್ಟು ಮತದಾರರು ಆಧಾರ್ ಸಂಖ್ಯೆ ಜೋಡಣೆ ಪೂರ್ಣ ಮಾಡಿದ್ದಾರೆ. ಆಧಾರ್ ಸಂಖ್ಯೆ ಜೋಡಣೆಯಲ್ಲಿ ತುಮಕೂರು ಜಿಲ್ಲೆಯು ರಾಜ್ಯದಲ್ಲಿಯೇ ಮೊದಲ ಸ್ಥಾನದಲ್ಲಿದ್ದು ಶೀಘ್ರ ಶೇ.100ರಷ್ಟು ಜೋಡಣಾ ಪ್ರಕ್ರಿಯೆಯನ್ನು ಮುಗಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶಿಸಿದರು.

ಕಂದಾಯ ಗ್ರಾಮಗಳಿಗೆ ಹಕ್ಕುಪತ್ರಗಳನ್ನು ನೀಡಲು ಅಗತ್ಯ ಕ್ರಮಕೈಗೊಳ್ಳಬೇಕು. ಕಂದಾಯ ಇಲಾಖೆಯ ಎ/ಬಿ/ಸಿ/ಡಿ/ಇ ವರ್ಗದ ದಾಖಲೆಗಳನ್ನು ಡಿಜಿಟಲೀಕರಣ ಮಾಡುವ ಕೆಲಸ ಪ್ರಗತಿಯಲ್ಲಿದ್ದು, ಜಿಲ್ಲೆಯ ಎಲ್ಲ ತಹಶೀಲ್ದಾರ್‌ಗಳು ಕಂದಾಯ ದಾಖಲೆಗಳ ಡಿಜಿಟಲೀಕರಣಕ್ಕೆ ಆದ್ಯತೆ ನೀಡಬೇಕು ಎಂದು ತಿಳಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ: ಕೆ. ವಿದ್ಯಾಕುಮಾರಿ, ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ಉಪವಿಭಾಗಾಧಿಕಾರಿ ವಿ ಅಜಯ್, ಡಿಹೆಚ್‌ಓ ಡಾ|| ಮಂಜುನಾಥ್, ಜಿಲ್ಲಾ ಶಸ್ತ್ರ ಚಿಕಿತ್ಸಕಿ ಡಾ|| ವೀಣಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀಧರ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಎನ್. ಆಂಜನಪ್ಪ, ಸೇರಿದಂತೆ ಇನ್ನಿತರ ಅಧಿಕಾರಿಗಳು ಹಾಜರಿದ್ದರು.

ಟಿ ಎಸ್ ಕೃಷ್ಣಮೂರ್ತಿ

ಸಂಪಾದಕ ತುಮಕೂರು 9743340694

You May Also Like

error: Content is protected !!