ಸ್ವಚ್ಛತೆ ಕಾಪಾಡಿ-ಇತರರಿಗೂ ಪ್ರೇರೇಪಿಸಿ

ತುಮಕೂರು: ನಮ್ಮ ಸುತ್ತಮುತ್ತಲ ಪರಿಸರದಲ್ಲಿ ಎಲ್ಲೆಂದರಲ್ಲಿ ಕಸ ಬಿಸಾಡದೆ ಸ್ವಚ್ಛತೆ ಕಾಪಾಡಿಕೊಂಡು ಇತರರಿಗೂ ಸ್ವಚ್ಛತೆ ಕಾಪಾಡುವ ಬಗ್ಗೆ ಪ್ರೇರಣೆ ನೀಡಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ: ಕೆ. ವಿದ್ಯಾಕುಮಾರಿ ತಿಳಿಸಿದರು.

ತಾಲ್ಲೂಕಿನ ಊರ್ಡಿಗೆರೆ ಗ್ರಾಮಪಂಚಯತಿ ವ್ಯಾಪ್ತಿ ದೇವರಾಯನ ದುರ್ಗದ ಇತಿಹಾಸ ಪ್ರಸಿದ್ಧ ಶ್ರೀ ಭೋಗ ನರಸಿಂಹಸ್ವಾಮಿ ಸುಕ್ಷೇತ್ರದಲ್ಲಿಂದು ಸ್ವಚ್ಛತಾ ಸೇವಾ ಆಂದೋಲನ ಕಾರ್ಯಕ್ರಮದಡಿ ಹಮ್ಮಿಕೊಂಡಿದ್ದ ಕಲ್ಯಾಣಿಯನ್ನು ಸ್ವಚ್ಛಗೊಳಿಸುವ ಶ್ರಮದಾನ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ನಮ್ಮೆಲ್ಲರ ಆರೋಗ್ಯದ ದೃಷ್ಟಿಯಿಂದ ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ಉಳಿಸುವ ಸಲುವಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿರ್ದೇಶನದನ್ವಯ ಜಿಲ್ಲಾದ್ಯಂತ ಸೆಪ್ಟೆಂಬರ್ 15 ರಿಂದ ಅಕ್ಟೋಬರ್ 2ರವರೆಗೆ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಡಿ ಗ್ರಾಮೀಣ ನೈರ್ಮಲ್ಯವನ್ನು ಸುಧಾರಿಸುವ ನಿಟ್ಟಿನಲ್ಲಿ ಸ್ವಚ್ಛತೆ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.

ದಿನನಿತ್ಯ ಬಳಕೆಯಲ್ಲಿ ಪ್ಲಾಸ್ಟಿಕ್ ಅನ್ನು ಬಳಸದೇ ಪರಿಸರ ಸ್ನೇಹಿ ಕೈಚೀಲ ವಸ್ತುಗಳನ್ನು ಉಪಯೋಗಿಸಬೇಕು. ಪ್ರತಿಯೊಬ್ಬರೂ ಅವರ ಮನೆಯ ಕಸವನ್ನು ಹಸಿ ಮತ್ತು ಒಣ ಕಸವನ್ನಾಗಿ ವಿಂಗಡಿಸಿ ವಿಲೇವಾರಿ ಮಾಡಬೇಕು ಎಂದು ಸಲಹೆ ನೀಡಿದರು.

ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ಸ್ವಚ್ಛತೆ ಕಾಪಾಡಿಕೊಳ್ಳುವ ಬಗ್ಗೆ ಪ್ರತಿಜ್ಞಾ ವಿಧಿ ಬೋಧಿಸಿದ ನಂತರ ಮಾಡನಾಡುತ್ತಾ, ಸ್ವಚ್ಛ ಪರಿಸರ ನಿರ್ಮಾಣ ಮಾಡುವ ಉದ್ದೇಶದಿಂದ ಜಿಲ್ಲಾದ್ಯಂತ ಹಮ್ಮಿಕೊಂಡಿರುವ ಸ್ವಚ್ಛತಾ ಹೀ ಸೇವಾ ಆಂದೋಲನ ಕಾರ್ಯಕ್ರಮದಡಿ ಗ್ರಾಮೀಣ ಪ್ರದೇಶದಲ್ಲಿ ಒತ್ತುವರಿಯಾಗಿರುವ ಕಲ್ಯಾಣಿ ಸೇರಿದಂತೆ ಒಟ್ಟು 250ಕ್ಕಿಂತ ಹೆಚ್ಚು ದೇವಸ್ಥಾನ, ಕಲ್ಯಾಣಿಗಳನ್ನು ಪತ್ತೆ ಹಚ್ಚಿ ಸ್ವಚ್ಛಗೊಳಿಸಲಾಗಿದೆ. ಕಳೆದ ತಿಂಗಳು ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದ ಜಲಾವೃತವಾಗಿದ್ದ ದೇವಸ್ಥಾನಗಳನ್ನೂ ಸಹ ಗ್ರಾಮಪಂಚಾಯತಿ ಅಧಿಕಾರಿ/ಸಿಬ್ಬಂದಿ, ಸ್ವಚ್ಛತಾಗಾರರು ಮುತುವರ್ಜಿವಹಿಸಿ ಸ್ವಚ್ಛಗೊಳಿಸಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ ಎಂದು ತಿಳಿಸಿದರು.

ಜನರಲ್ಲಿ ಸ್ವಚ್ಛತೆಯ ಜವಾಬ್ದಾರಿಯನ್ನು ಮೂಡಿಸುವುದು ಈ ಶ್ರಮದಾನ ಕಾರ್ಯಕ್ರಮದ ಮುಖ್ಯ ಉದ್ದೇಶ. ಈ ಕಾರ್ಯಕ್ರಮದಡಿ ಪ್ಲಾಸ್ಟಿಕ್ ಮುಕ್ತ ಗ್ರಾಮವನ್ನಾಗಿಸುವ ನಿಟ್ಟಿನಲ್ಲಿ ಪ್ಲಾಸ್ಟಿಕ್ ತ್ಯಾಜ್ಯದ ದುಷ್ಪರಿಣಾಮಗಳ ಬಗ್ಗೆ ಜನಜಾಗೃತಿ ಮೂಡಿಸಲಾಗುತ್ತಿದೆ ಎಂದರಲ್ಲದೆ, ಶ್ರಮದಾನದ ಮೂಲಕ ಸ್ವಚ್ಛಗೊಳಿಸಲಾದ ಪ್ರದೇಶಗಳಲ್ಲಿ ಯಥಾರೀತಿ ನೈರ್ಮಲ್ಯತೆಯನ್ನು ಕಾಪಾಡಿಕೊಂಡು ಸ್ವಚ್ಛಗ್ರಾಮ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕೆಂದರು.

ಶ್ರಮದಾನ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ: ಕೆ. ವಿದ್ಯಾಕುಮಾರಿ ಅವರು ಕೈಗವಸು ತೊಟ್ಟು, ಕುಡುಗೋಲು ಹಿಡಿದು ಕಲ್ಯಾಣಿ ಸುತ್ತ ಬೆಳೆದಿದ್ದ ಗಿಡ-ಗಂಟೆಗಳನ್ನು ಕತ್ತರಿಸಿ ಸ್ವಚ್ಛಗೊಳಿಸಿದರು. ಇವರೊಂದಿಗೆ ಊರ್ಡಿಗೆರೆ ಗ್ರಾಮಪಂಚಾಯತಿ ಅಧ್ಯಕ್ಷ ಗಂಗಾಧರಯ್ಯ, ಗ್ರಾಮಪಂಚಾಯತಿ ಸದಸ್ಯೆ ಅನ್ನಪೂರ್ಣ, ಅರೆ ಗುಜ್ಜನಹಳ್ಳಿ ಗ್ರಾಮಪಂಚಾಯತಿ ಕಾರ್ಯದರ್ಶಿ ಜ್ಯೋತಿ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಅತೀಕ್‌ಪಾಷಾ, ಮುಖ್ಯ ಲೆಕ್ಕಾಧಿಕಾರಿ ನರಸಿಂಹಮೂರ್ತಿ, ಮುಖ್ಯ ಯೋಜನಾಧಿಕಾರಿ ಸಣ್ಣ ಮಸಿಯಪ್ಪ, ನಿರ್ಮಿತಿ ಕೇಂದ್ರದ ವ್ಯವಸ್ಥಾಪಕ ನಿರ್ದೇಶಕ ರಾಜಶೇಖರ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಗಂಗಪ್ಪ, ರೇಷ್ಮೆ ಇಲಾಖೆ ಉಪನಿರ್ದೇಶಕ ರಾಮಕೃಷ್ಣ, ದೇವರಾಯನ ದುರ್ಗ ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ಎಸ್.ಟಿ.ಸುನೀಲ್ ಕುಮಾರ್, ಕೃಷಿ ಜಂಟಿ ನಿರ್ದೇಶಕಿ ರಾಜಸುಲೋಚನಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀಧರ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ರಘು, ಊರ್ಡಿಗೆರೆ ಗ್ರಾಮಪಂಚಾಯತಿ ಅಭಿವೃದ್ಧಿ ಅಧಿಕಾರಿ ಚಂದ್ರಪ್ರಭ, ಅರೆಗುಜ್ಜನಹಳ್ಳಿ ಗ್ರಾಮಪಂಚಾಯತಿ ಅಭಿವೃದ್ಧಿ ಅಧಿಕಾರಿ ಕೆ.ಟಿ. ಮೋಹನ್‌ಕುಮಾರ್, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರಮೇಶ್, ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಣಾಧಿಕಾರಿ ಜಯಪಾಲ್, ಊರ್ಡಿಗೆರೆ-ಅರೆಗುಜ್ಜನಹಳ್ಳಿ-ಬೆಳಗುಂಬ ಗ್ರಾಮಪಂಚಾಯತಿಗಳ ಸಿಬ್ಬಂದಿ ಶ್ರಮದಾನದಲ್ಲಿ ಭಾಗವಹಿಸಿ ಪ್ರವಾಸಿ ತಾಣವಾದ ದೇವರಾಯನ ದುರ್ಗ ಕ್ಷೇತ್ರದ ಕಲ್ಯಾಣಿಯನ್ನು ಸ್ವಚ್ಛಗೊಳಿಸಿದರು.

ಶ್ರಮದಾನ ಕಾರ್ಯಕ್ರಮದಲ್ಲಿ ಸಂಗ್ರಹವಾದ ಪ್ಲಾಸ್ಟಿಕ್ ತ್ಯಾಜ್ಯ ಹಾಗೂ ಹಸಿ ಕಸವನ್ನು ಮೂಲದಲ್ಲಿಯೇ ಬೇರ್ಪಡಿಸಿ ಪ್ರತ್ಯೇಕ ವಾಹನಗಳ ಮೂಲಕ ವೈಜ್ಞಾನಿಕವಾಗಿ ವಿಲೇವಾರಿ ಮಾಡಲಾಯಿತು.

ಟಿ ಎಸ್ ಕೃಷ್ಣಮೂರ್ತಿ

ಸಂಪಾದಕ ತುಮಕೂರು 9743340694

You May Also Like

error: Content is protected !!